ಹೈಸ್ಕೂಲು ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಕಾರ್‍ಯಕ್ರಮ ಉತ್ಕರ್ಷ-ನರೇಂದ್ರ 2019

ವಿದ್ಯಾರ್ಥಿಗಳ ಪ್ರತಿಭೆಯ ಅಭಿವ್ಯಕ್ತಿಗೆ ವೇದಿಕೆಯಾಗಿದೆ ಈ ಉತ್ಕರ್ಷ-ನರೇಂದ ಕಾರ್‍ಯಕ್ರಮ. ಅದಕ್ಕೆ ಪೂರಕ ವಾತಾವರಣವನ್ನು ಕಲ್ಪಿಸುವುದು ಶಿಕ್ಷಕರ ಮತ್ತು ಪಾಲಕರ ಕರ್ತವ್ಯ. ಇಂತಹ ಕಾರ್‍ಯಕ್ರಮದಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಯನ್ನು ಹೊರತರಲು ಮುಂದಾಗಬೇಕು. ಆಗ ಮಾತ್ರ ಮುಂದಿನ ದಿನಗಳಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್‌ಕುಮಾರ್ ರೈ ಹೇಳಿದರು. ನರೇಂದ್ರ ಪದವಿ ಪೂರ್ವಕಾಲೇಜಿನಲ್ಲಿ ಹೈಸ್ಕೂಲು ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕಾಗಿ ಆಯೋಜಿಸಲಾದ ಉತ್ಕರ್ಷ-ನರೇಂದ್ರ 2019 ಕಾರ್‍ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೂಪಲೇಖರವರು ಮಾತನಾಡುತ್ತಾ ಮೌಲ್ಯಯುತ ಶಿಕ್ಷಣವನ್ನು ನೀಡುವುದರ ಜೊತೆಗೆ ರಾಷ್ಟ್ರೀಯತೆಯನ್ನು ಬಿಂಬಿಸುವಂತಹ ವಿದ್ಯಾರ್ಥಿಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುವುದೇ ನಮ್ಮ ಸಂಸ್ಥೆಯ ಉದ್ದೇಶವಾಗಿದೆ. ವಿದ್ಯಾರ್ಥಿಗಳ ಏಳಿಗೆಗಾಗಿ ಮತ್ತು ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಪ್ರದರ್ಶಿಸುವ ಸಲುವಾಗಿ ಈ ಕಾರ್‍ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್‌ರವರು ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ವಿದ್ಯಾರ್ಥಿಗಳನ್ನು ಕೇವಲ ಪಠ್ಯಕ್ಕೆ ಸೀಮಿತಗೊಳಿಸದೇ ಅವರ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಈ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಪ್ರೌಢ ಶಾಲೆಗಳ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಸಕಾರಾತ್ಮಕ ಸ್ಪಂದನೆ ನಮ್ಮೆಲ್ಲರಲ್ಲಿಯೂ ಸಂತಸವನ್ನೂ, ಸ್ಪೂರ್ತಿಯನ್ನು ತಂದಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀಕಾಂತ್ ಕೊಳತ್ತಾಯ, ಸದಸ್ಯರಾದ ಅರುಣ್ ಬಿ. ಕೆ., ಕಾರ್‍ಯಕ್ರಮದ ಸಂಯೋಜಕರಾದ ಭೌತಶಾಸ್ತ್ರ ಉಪನ್ಯಾಸಕರಾದ ಸೂರ್‍ಯನಾರಾಯಣ ಭಟ್ ಉಪಸ್ಥಿತರಿದ್ದರು. ಉಪನ್ಯಾಸಕರಾದ ವಿಘ್ನೇಶ ವೈ ವಂದಿಸಿದರು. ಉಪನ್ಯಾಸಕರಾದ ಶ್ರೀಮತಿ ರೇಣುಕಾ ಕಾರ್‍ಯಕ್ರಮವನ್ನು ನಿರೂಪಿಸಿದರು.