ನೂತನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಉದ್ಘಾಟನೆ

ವಿದ್ಯಾರ್ಥಿಗಳಲ್ಲಿ ಸಮಾಜಮುಖಿ ಚಿಂತನೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಹಾಗೂ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವ ಸದುದ್ದೇಶದೊಂದಿಗೆ ಈ ರೋವರ್ಸ್ ಮತ್ತು ರೇಂಜರ್ಸ್ ಘಟಕವನ್ನು ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ ಗುಣ ಬೆಳೆಸಲು ರೋವರ್ಸ್ ಮತ್ತು ರೇಂಜರ್ಸ್ ಘಟಕ ಉತ್ತಮ ಮಾರ್ಗದರ್ಶನ ನೀಡುತ್ತದೆ. ಜೊತೆಗೆ ಜೀವನ ಕೌಶಲ ಮತ್ತು ನೈತಿಕ ಶಿಕ್ಷಣ ದೊರೆಯುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇದರ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಹೇಳಿದರು.

ನರೇಂದ್ರ ಪ.ಪೂ. ಕಾಲೇಜಿನಲ್ಲಿ ನಡೆದ ನೂತನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ರೋವರ್ಸ್ ಮತ್ತು ರೇಂಜರ್ಸ್ ಘಟಕದ ಈ ಶೈಕ್ಷಣಿಕ ಸಾಲಿನ ಚಟುವಟಿಕೆಗಳ ಬಗ್ಗೆ ವಿವರಿಸಿದರು.

ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸಂಪತ್ ಕುಮಾರ್ ಮಾತನಾಡುತ್ತಾ,ವ್ಯಕ್ತಿತ್ವ ವಿಕಸನದ ಜೊತೆಗೆ ಮಕ್ಕಳಿಗೆ ವೈಯಕ್ತಿಕ ಲಾಭವೂ ಇರುವುದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ಈ ಶಿಕ್ಷಣವನ್ನು ಪಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಪೋಷಕರು ಹೆಚ್ಚು ಮುತುವರ್ಜಿ ವಹಿಸಿ ತಮ್ಮ ಮಕ್ಕಳನ್ನು ಈ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕಿದೆ ಎಂದು ಹೇಳಿದರು.

ವೇದಿಕೆಯಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಸಂಯೋಜಕರಾದ ಶ್ರೀಮತಿ ಪ್ರಭಾವತಿ ಮತ್ತು ಮಂಜುಗಣೇಶ್ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ, ಉಪನ್ಯಾಸಕರಾದ ಶ್ರೀಮತಿ ಪ್ರಭಾವತಿ ವಂದಿಸಿದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಕು. ಸುಭಾಶಿತ ಕಾರ್‍ಯಕ್ರಮವನ್ನು ನಿರೂಪಿಸಿದರು.